August 28, 2026
WhatsApp Image 2026-08-28 at 12.07.16 PM

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್‌ (21) ಬಂಧಿತ ಆರೋಪಿ. 2025ರ ಸೆಪ್ಟೆಂಬರ್‌ನಿಂದ ನವೆಂಬರ್‌ ಅವಧಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ, ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ.

ಈ ಬಗ್ಗೆ ಆ.23ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/2026ರಂತೆ ಬಿಎನ್‌ಎಸ್‌ ಕಲಂ 64(2)(m), 65(1), 351(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 4(2), 6ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಶ್ರೀಕಾಂತ್‌ ಪರಾರಿಯಾಗಲು ಯತ್ನಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್‌ಐ ಸಮರ್ಥ್ ಆರ್. ಗಾಣಿಗೇರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಆ.25ರಂದು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಆರೋಪಿಯನ್ನು ಬಂಧಿಸಿದೆ.

ಕಾರ್ಯಾಚರಣೆಯಲ್ಲಿ ಧರ್ಮಸ್ಥಳ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ಗಳಾದ ವೃಷಭ (418), ಮಹೇಶ್‌ (369) ಹಾಗೂ ಪೊಲೀಸ್ ಕಾನ್‌ಸ್ಟೆಬಲ್‌ ಚರಣ್ ರಾಜ್ (975) ಭಾಗವಹಿಸಿದ್ದರು.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

About The Author

Leave a Reply