

ಟ್ರಕ್ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ನಾಗ್ಪುರ-ರಾಯ್‌ಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪಿಂಪಲ್‌ಗಾಂವ್ ಪ್ರದೇಶದಲ್ಲಿ ಇಂದು (ಸೆ.11) ಮುಂಜಾನೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇತರ ಮೂವರನ್ನು ತಕ್ಷಣವೇ ಸಕೋಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ನಂತರ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಶವಾಗಾರಕ್ಕೆ ರವಾನಿಸಲಾಗಿದೆ.ಅಪಘಾತದ ಬಳಿಕ ಈ ಪ್ರದೇಶದಲ್ಲಿ ಸಂಚಾರಕ್ಕೆ ಸ್ವಲ್ಪ ಅಡಚಣೆ ಉಂಟಾಗಿತ್ತು. ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.







