

ಬಂಟ್ವಾಳ: ಮಾದಕ ವಸ್ತುಗಳ ಸೇವನೆ ಹಾಗೂ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ. ಹೇಳಿದರು.

ಸಜೀಪನಡು ನೇತಾಜಿ ಯುವಕ ಸಂಘದ ವಠಾರದಲ್ಲಿ ನಡೆದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯುವಜನತೆ ಸೇರಿದಂತೆ ಸಾರ್ವಜನಿಕರು ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಕರೆ ನೀಡಿದರು. ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟದ ಕುರಿತು ಮಾಹಿತಿ ಇದ್ದಲ್ಲಿ ಪೊಲೀಸರಿಗೆ ತಿಳಿಸಬಹುದು. ಕ್ಯೂಆರ್ ಕೋಡ್ ಮೂಲಕವೂ ಮಾಹಿತಿಯನ್ನು ನೀಡುವ ವ್ಯವಸ್ಥೆ ಇದ್ದು, ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.
ಸಮುದಾಯ ಆರೋಗ್ಯಾಧಿಕಾರಿಗಳಾದ ಜನಿಫರ್ ಅಂದ್ರಾಜೆ ಅವರು ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಆರೋಗ್ಯದ ಮೇಲೆ ಮಾತ್ರವಲ್ಲದೆ ಮಾನಸಿಕ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಉಂಟಾಗುತ್ತದೆ. ನಿರಂತರ ಮಾದಕ ವಸ್ತು ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಾಮಾಜಿಕ ಜೀವನದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಯಶವಂತ ಡಿ, ಸಜೀಪ ಸೆಂಟರ್ ಜುಮ್ಮಾ ಮಸೀದಿ ಅಧ್ಯಕ್ಷ ಅಶ್ರಫ್ ಹಾಜಿ, ಸಜೀಪಮೂಡದ ಶ್ರೀಕಾಂತ್ ಶೆಟ್ಟಿ ಸಂಕೇಶ, ಸಂತ ತೋಮಸರ ಚರ್ಚ್ ಆಯೋಗದ ಅಧ್ಯಕ್ಷ **ರೊನಾಲ್ಡೊ ಮೊರಸ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸ್ವಾಗತವನ್ನು ಸುರೇಶ್ ಬಂಗೇರ ಅರಿಯಪು ನೆರವೇರಿಸಿದರು. ಪ್ರಶಾಂತ್ ಕಂದೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಮೂಲಕ ಯುವಜನತೆಯನ್ನು ದುಶ್ಚಟಗಳಿಂದ ದೂರವಿಡುವುದು ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.






