September 19, 2026
WhatsApp Image 2026-09-19 at 4.01.38 PM

ಇತಿಹಾಸದಲ್ಲಿ ಎಂದಿಗೂ ಮರೆಯಲಾಗದ ರೀತಿಯಲ್ಲಿ ಮಂಗಳೂರಿನಲ್ಲಿ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯ ಮೂಲಕ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆಯಲಾಗಿದೆ. ಕರಾವಳಿಯ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒಟ್ಟು ₹32,611 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿರುವುದು ಸಂತಸದ ಹಾಗೂ ಸ್ವಾಗತಾರ್ಹ ಬೆಳವಣಿಗೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ಅಭಿನಂದನೆ ಸಲ್ಲಿಸಿದ್ದಾರೆ.

ಕರಾವಳಿ ಭಾಗದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರದ ಈ ಕ್ರಮವು ಕರಾವಳಿಯ ಬಗ್ಗೆ ಸರ್ಕಾರ ಹೊಂದಿರುವ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ. ಮೂಲಸೌಕರ್ಯ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ, ಮೀನುಗಾರಿಕೆ, ಬಂದರು, ಶಿಕ್ಷಣ ಹಾಗೂ ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳಿಗೆ ಅನುಮೋದನೆ ದೊರೆತಿರುವುದು ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರ ಸಮನ್ವಯ ಮತ್ತು ಸಚಿವ ಸಂಪುಟದ ಸಹಕಾರದೊಂದಿಗೆ ಕರಾವಳಿಯ ಅಭಿವೃದ್ಧಿ ವಿಚಾರಗಳಿಗೆ ಆದ್ಯತೆ ದೊರೆತಿರುವುದು ಗಮನಾರ್ಹ. ಕರಾವಳಿಯ ಜನರ ಆಶೋತ್ತರಗಳು ಹಾಗೂ ಬಹುಕಾಲದ ಅಭಿವೃದ್ಧಿ ಅಗತ್ಯಗಳನ್ನು ಪರಿಗಣಿಸಿ ಸರ್ಕಾರ ಕೈಗೊಂಡಿರುವ ಈ ನಿರ್ಧಾರಗಳು ಮುಂದಿನ ದಿನಗಳಲ್ಲಿ ಈ ಭಾಗದ ಪ್ರಗತಿಗೆ ವೇಗ ನೀಡುವ ನಿರೀಕ್ಷೆ ಮೂಡಿಸಿದೆ.

ಇದೇ ಸಂದರ್ಭದಲ್ಲಿ ತುಳು ಭಾಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡುವ ನಿರ್ಧಾರವೂ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಕರಾವಳಿಯ ಭಾಷೆ, ಸಂಸ್ಕೃತಿ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಚಾರಗಳು ಒಂದೇ ವೇದಿಕೆಯಲ್ಲಿ ಚರ್ಚೆ ಹಾಗೂ ನಿರ್ಧಾರಕ್ಕೆ ಬಂದಿರುವುದು ಈ ಸಚಿವ ಸಂಪುಟ ಸಭೆಯ ವಿಶೇಷತೆಯಾಗಿದೆ

ಕರಾವಳಿಯ ಅಭಿವೃದ್ಧಿಗೆ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ಅಭಿವೃದ್ಧಿಯ ಫಲದಲ್ಲಿ ಮಹಿಳೆಯರಿಗೂ ಸಮಾನ ಅವಕಾಶ ಮತ್ತು ಪ್ರಾತಿನಿಧ್ಯ ದೊರೆಯಬೇಕು. ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವಿಚಾರವನ್ನು ವಿಶೇಷವಾಗಿ ಪರಿಗಣಿಸಿ, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವ ಮೂಲಕ ಮಹಿಳೆಯರಿಗಾಗಿ ವಿಶೇಷ ಪ್ಯಾಕೇಜ್ ಹಾಗೂ ಅಗತ್ಯ ಯೋಜನೆಗಳನ್ನು ಈಡೇರಿಸುವ ಭರವಸೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರಾವಳಿಯ ಸಮಗ್ರ ಅಭಿವೃದ್ಧಿಗೆ ಮಹತ್ವದ ನಿರ್ಧಾರಗಳನ್ನು ಕೈಗೊಂಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಸಮಸ್ತ ಮಂತ್ರಿಮಂಡಲಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಕರಾವಳಿಯ ಅಭಿವೃದ್ಧಿಗೆ ಹೊಸ ದಿಕ್ಕು ಹಾಗೂ ಹೊಸ ವೇಗ ನೀಡುವ ಈ ಐತಿಹಾಸಿಕ ನಿರ್ಧಾರಗಳು ಜನಪರ ಅಭಿವೃದ್ಧಿಯ ಪಯಣದಲ್ಲಿ ಸ್ಮರಣೀಯ ಹೆಜ್ಜೆಗಳಾಗಲಿ ಎಂದು ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ಹಾರೈಸಿದ್ದಾರೆ.

About The Author

Leave a Reply