

ಹೈದರಾಬಾದ್ ಪೊಲೀಸರಿಗೆ ತಮ್ಮ ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಅನುಮಾನದಿಂದ ಇಬ್ಬರು ಸ್ನೇಹಿತರು 30 ವರ್ಷದ ವ್ಯಕ್ತಿಯೊಬ್ಬನನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೃತನನ್ನು ವಸೀಮ್ ಅಲಿಯಾಸ್ ಮೊಹಮ್ಮದ್ ನಸೀರುದ್ದೀನ್ ಅಹ್ಮದ್ ಎಂದು ಗುರುತಿಸಲಾಗಿದೆ. ವಸೀಮ್ ಹಾಗೂ ಆರೋಪಿಗಳಿಬ್ಬರ ವಿರುದ್ಧವೂ ಈ ಹಿಂದೆ ಮಾದಕ ವಸ್ತುಗಳು ಮತ್ತು ಗಾಂಜಾ ಮಾರಾಟಕ್ಕೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ವಸೀಮ್ ತಮ್ಮ ಮಾದಕ ವಸ್ತುಗಳ ಚಟುವಟಿಕೆಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಅನುಮಾನ ಆರೋಪಿಗಳಿಗಿತ್ತು. ಇದೇ ವಿಚಾರವಾಗಿ ವಸೀಮ್ ಹಾಗೂ ಇಬ್ಬರು ಆರೋಪಿಗಳ ನಡುವೆ ವಾಗ್ವಾದ ನಡೆದಿದ್ದು, ಬಳಿಕ ಆರೋಪಿಗಳು ಚೂರಿಯಿಂದ ಆತನ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ವಸೀಮ್‌ನನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಿಯಾಸ್ ಹಾಗೂ ಶೋಯಿಬ್/ಸೊಹೈಲ್ ಎಂಬವರ ಮೇಲೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಘಟನೆಗೆ ಸಂಬಂಧಿಸಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಘಟನೆಯ ನಿಖರ ಕಾರಣ ಹಾಗೂ ಆರೋಪಿಗಳ ಪಾತ್ರದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಲಭ್ಯವಿರುವ ಇತರ ಸಾಕ್ಷ್ಯಗಳನ್ನು ಪರಿಶೀಲಿಸಲಾಗುತ್ತಿದೆ.







