

ಮಂಗಳೂರು: ನಗರದ ಎಮ್ಮೆಕೆರೆಯಲ್ಲಿರುವ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯ ಸ್ಥಿತಿಯಲ್ಲಿದ್ದ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಶಮ್ಮಾಝ್ (19) ಶನಿವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯುತ್ತಿದ್ದ ವೇಳೆ ಹಾಲ್‌ನ ಬಾಲ್ಕನಿ ಭಾಗದ ತಡೆಗೋಡೆ ಏಕಾಏಕಿ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ ತಡೆಗೋಡೆಯ ಬಳಿ ನಿಂತಿದ್ದ ಐವರು ವಿದ್ಯಾರ್ಥಿಗಳು ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು.
ಗಾಯಾಳುಗಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಒದಗಿಸಲಾಗಿತ್ತು. ಆದರೆ, ತೀವ್ರ ಸ್ವರೂಪದ ಪೆಟ್ಟು ಬಿದ್ದಿದ್ದ ಶಮ್ಮಾಝ್ ಅವರ ಮೆದುಳು ಶನಿವಾರ ರಾತ್ರಿಯೇ ನಿಷ್ಕ್ರಿಯಗೊಂಡಿತ್ತು. ವೈದ್ಯರು ನಿರಂತರ ಚಿಕಿತ್ಸೆ ಮುಂದುವರಿಸಿದ್ದರೂ, ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರದೆ ಅವರು ಕೊನೆಯುಸಿರೆಳೆದಿದ್ದಾರೆ.

ಆಯೋಜಕರು ಹಾಗೂ ಮಾಲೀಕರ ವಿರುದ್ಧ ಎಫ್‌ಐಆರ್:
ಘಟನೆ ಸಂಬಂಧ ಮೃತ ವಿದ್ಯಾರ್ಥಿಯ ತಂದೆ ನೀಡಿದ ದೂರಿನನ್ವಯ ಕಾರ್ಯಕ್ರಮದ ಆಯೋಜಕರು ಹಾಗೂ ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ನಿರ್ಲಕ್ಷ್ಯ ವಹಿಸಿ ಸಾವಿಗೆ ಕಾರಣರಾದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ






