October 9, 2026
WhatsApp Image 2026-10-09 at 2.46.22 PM

ಮಂಗಳೂರು: ನಿಷೇಧಿತ ಮಾದಕವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿತರನ್ನು ಬಂಧಿಸಿ, ಅವರುಗಳಿಂದ ಸುಮಾರು ₹ 1 ಕೋಟಿ 58 ಲಕ್ಷದ 34 ಸಾವಿರ ಮೌಲ್ಯದ 1 ಕೆಜಿ 796.96 ಗ್ರಾಂ MDMA ಮಾದಕವಸ್ತುವನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಗರದಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು MDMA ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಿನಾಂಕ ಅ. 8ರಂದು ರಾತ್ರಿ 10 ಗಂಟೆಗೆ ಉಳ್ಳಾಲ ತಾಲುಕು ಕುಂಪಲದ ಡಿಮಾರ್ಟ್ ಬಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1 ಕೆಜಿ 796.96 ಗ್ರಾಂ ಎಂಡಿಎಂಎ ಹಾಗೂ 03 ಮೊಬೈಲ್ ಫೋನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕು ಸ್ವೀಪ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್, ವಾಟರ್ ಪ್ಯೂರಿಪಾಯರ್ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 1,63,84,000/- ಆಗಿರುತ್ತದೆ. ಈ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಆರೋಪಿ ಅಬ್ದುಲ್ ಹಾಪೀಲ್ ಎಂಬಾತನ ವಿರುದ್ದ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಪ್ರಕರಣ ಮತ್ತು ಆರೋಪಿ ಜಿಯಾವುಲ್ ಹಕ್ ಎಂಬಾತನ ವಿರುದ್ದ ದುಬೈ ದೇಶದ ರಸ್-ಅಲ್- ಖೈಮಾ ಎಂಬಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ 03 ವರ್ಷಗಳ ಕಾಲ ಜೈಲ್ ಶಿಕ್ಷೆ ಅನುಭವಿಸಿ ಬಳಿಕ ಭಾರತಕ್ಕೆ ಬಂದಿರುವುದಾಗಿದೆ. ಹಾಗೂ ಆರೋಪಿ ಅಲ್ತಾಫ್ ಎಂಬಾತನ ವಿರುದ್ದ ಈ ಹಿಂದೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ಪಂಜಾಬ್ ರಾಜ್ಯದ ಅಮೃತಸರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್ ನ ನೀರು ಸಂಗ್ರಹವಾಗುವ ಸ್ಥಳದಲ್ಲಿ MDMA ಅನ್ನು ಭದ್ರವಾಗಿ ಒಳಗೆ ಇರಿಸಿ, ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ನಂತರ ಈ ಮಾದಕವಸ್ತುವನ್ನು ಕೇರಳ ರಾಜ್ಯ ಹಾಗೂ ಮಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದು, ಪ್ರಾರಂಭದಲ್ಲಿಯೇ ಜಾಲವನ್ನು ಪತ್ತೆಹಚ್ಚುವಲ್ಲಿ ಮತ್ತು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

About The Author

Leave a Reply