

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮಾಡದಕೆರೆ ರಸ್ತೆಯ ಮಸಣೇಹಳ್ಳಿ ಗೇಟ್ ಬಳಿ ಮಧ್ಯರಾತ್ರಿ ಸುಮಾರು 12:30ರ ವೇಳೆಗೆ ಭೀಕರ ಅಪಘಾತ ಸಂಭವಿಸಿದೆ.
ದೇವನಹಳ್ಳಿಯಿಂದ ಶಿವಮೊಗ್ಗಕ್ಕೆ ಕಲ್ಲುಗಳನ್ನು ತುಂಬಿಕೊಂಡು ತೆರಳುತ್ತಿದ್ದ AP 04 TU 2223 ನೋಂದಣಿ ಸಂಖ್ಯೆಯ 12 ಚಕ್ರಗಳ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ.
ಲಾರಿಯೊಳಗೆ ಸಿಲುಕಿದ್ದ ಚಾಲಕ ಬೆಂಕಿಯ ಕೆನ್ನಾಲಿಗೆಯ ನಡುವೆ ಪ್ರಾಣಾಪಾಯಕ್ಕೆ ಸಿಲುಕಿದ್ದನು. ಈ ವೇಳೆ ಸ್ಥಳಕ್ಕೆ ಧಾವಿಸಿದ ಹೊಸದುರ್ಗ ಠಾಣೆಯ ಪಿಎಸ್‌ಐ ಶ್ರೀಶೈಲಾ ಅವರು ಲಾರಿಯ ಮುಂಭಾಗದ ಗಾಜುಗಳನ್ನು ಕಲ್ಲಿನಿಂದ ಒಡೆದು ಚಾಲಕನನ್ನು ರಕ್ಷಿಸಿದ್ದಾರೆ. ಸಮಯಪ್ರಜ್ಞೆ ಮೆರೆದ ಪಿಎಸ್‌ಐ ಅವರು ಚಾಲಕನ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು, ಘಟನೆಗೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಬೆಂಕಿಯ ನಡುವೆ ಸಿಲುಕಿದ್ದ ಚಾಲಕನಿಗೆ ಮರುಜೀವ ನೀಡಿದ ಪಿಎಸ್‌ಐ ಶ್ರೀಶೈಲಾ ಅವರ ಸಾಹಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.






