October 29, 2026
WhatsApp Image 2026-10-29 at 6.31.32 PM

ಸುಳ್ಯ: ಕಸ್ತೂರಿ ರಂಗನ್ ವರದಿಯಿಂದ ಸುಳ್ಯ ತಾಲೂಕಿನ ಹಲವು ಗ್ರಾಮಗಳ ಜನರು ಆತಂಕಕ್ಕೆ ಒಳಗಾಗಿದ್ದು, ಅವರ ಬದುಕಿನ ಅಳಿವು-ಉಳಿವಿನ ಪ್ರಶ್ನೆಯಾಗಿರುವ ಈ ಗಂಭೀರ ವಿಚಾರವನ್ನು ಸಂಬಂಧಪಟ್ಟ ಜನಪ್ರತಿನಿಧಿಗಳ ಗಮನಕ್ಕೆ ಪರಿಣಾಮಕಾರಿಯಾಗಿ ತಲುಪಿಸದಿರುವುದು ತೀವ್ರ ಕಳವಳಕಾರಿ ಸಂಗತಿ ಎಂದು ಕೆಪಿಸಿಸಿ ಸಂಯೋಜಕ ಹಾಗೂ ಸುಳ್ಯ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ ಅಭಿಪ್ರಾಯಪಟ್ಟಿದ್ದಾರೆ.

ಕಸ್ತೂರಿ ರಂಗನ್ ವರದಿಯಿಂದ ಬಾಧಿತ ಪ್ರದೇಶಗಳ ಜನರು ಹಲವು ವರ್ಷಗಳಿಂದ ಆತಂಕದ ಬದುಕು ನಡೆಸುತ್ತಿದ್ದು, ಈ ವರದಿಯ ವಿರುದ್ಧ ಹೋರಾಟಗಾರರು ಹಲವು ಸುತ್ತಿನ ಹೋರಾಟಗಳನ್ನು ನಡೆಸಿದ್ದಾರೆ. ಜನರ ಹಿತದೃಷ್ಟಿಯಿಂದ ಕರ್ನಾಟಕ ಸರಕಾರವು ಕೇಂದ್ರ ಸರಕಾರದ ಕರಡು ಅಧಿಸೂಚನೆಯನ್ನು ಏಳು ಬಾರಿ ತಿರಸ್ಕರಿಸಿ ಕೇಂದ್ರಕ್ಕೆ ಕಳುಹಿಸಿರುವುದು ಗಮನಾರ್ಹ. ಆದರೆ, ಅಂತಿಮ ತೀರ್ಮಾನ ಕೈಗೊಳ್ಳುವ ಅಧಿಕಾರ ಕೇಂದ್ರ ಸರಕಾರದ ಕೈಯಲ್ಲಿರುವುದರಿಂದ, ಬಾಧಿತ ಗ್ರಾಮಗಳ ಜನರ ಭವಿಷ್ಯ ಕೇಂದ್ರದ ನಿರ್ಧಾರದ ಮೇಲೆ ಅವಲಂಬಿತವಾಗಿದೆ. ಹೀಗಾಗಿ, ಈ ವಿಚಾರದಲ್ಲಿ ನಮ್ಮ ಸಂಸದರು ಹಾಗೂ ಕೇಂದ್ರ ಸಚಿವರು ಹೆಚ್ಚಿನ ಮುತುವರ್ಜಿ ವಹಿಸಿ, ಜನರ ಆತಂಕಕ್ಕೆ ಶಾಶ್ವತ ಪರಿಹಾರ ದೊರಕಿಸಲು ಪ್ರಯತ್ನಿಸಬೇಕಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಸಂಸದರು ಸುಳ್ಯ ತಾಲೂಕಿಗೆ ಆಗಮಿಸಿ ಕಸ್ತೂರಿ ರಂಗನ್ ವರದಿ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದರೂ, ಸ್ಥಳದಲ್ಲಿದ್ದ ಹೋರಾಟಗಾರರ ನಾಯಕರು ಜನರ ಸಮಸ್ಯೆಗಳನ್ನು ವಿವರಿಸುವ ಮನವಿ ಸಲ್ಲಿಸದಿರುವುದು ಹಾಗೂ ಈ ಕುರಿತು ಸಂಸದರ ಮೇಲೆ ಒತ್ತಡ ಹೇರದಿರುವುದು ಬೇಸರದ ಸಂಗತಿ. ಜನರ ಬದುಕಿಗೆ ಸಂಬಂಧಿಸಿದ ಇಂತಹ ಗಂಭೀರ ವಿಚಾರದಲ್ಲಿ ಕೇಂದ್ರ ಸರಕಾರದ ಗಮನ ಸೆಳೆಯುವ ಪ್ರಯತ್ನವೂ ಸಮಾನವಾಗಿ ನಡೆಯಬೇಕಿತ್ತು. ಆದರೆ, ಹೋರಾಟ ರಾಜ್ಯ ಸರಕಾರಕ್ಕೆ ಮಾತ್ರ ಸೀಮಿತವಾಗಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡುವಂತಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಸ್ತೂರಿ ರಂಗನ್ ವರದಿಯಿಂದ ಬಾಧಿತ ಜನರ ಸಮಸ್ಯೆ ಕೇವಲ ಸ್ಥಳೀಯ ಅಥವಾ ರಾಜ್ಯಮಟ್ಟದ ವಿಚಾರವಲ್ಲ; ಇದು ಕೇಂದ್ರ ಸರಕಾರದ ನಿರ್ಧಾರಕ್ಕೆ ಸಂಬಂಧಿಸಿದ ಮಹತ್ವದ ವಿಷಯವಾಗಿದೆ. ಆದ್ದರಿಂದ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ನಾಯಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ, ಕೇಂದ್ರದ ಮೇಲೆ ಒತ್ತಡ ಹೇರುವ ಮೂಲಕ ಜನರ ಆತಂಕ ನಿವಾರಣೆಗೆ ಮುಂದಾಗಬೇಕು. ಜನಸಾಮಾನ್ಯರ ನೈಜ ಸಮಸ್ಯೆಗಳನ್ನು ಸಂಬಂಧಪಟ್ಟ ಜನಪ್ರತಿನಿಧಿಗಳ ಗಮನಕ್ಕೆ ತಲುಪಿಸುವ ಜವಾಬ್ದಾರಿಯನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಎಂ. ವೆಂಕಪ್ಪ ಗೌಡ ತಿಳಿಸಿದ್ದಾರೆ.

About The Author

Leave a Reply