November 5, 2026
WhatsApp Image 2026-11-05 at 9.45.04 AM

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತು LSD (ಲೈಸರ್ಜಿಕ್ ಆಸಿಡ್ ಡೈಥೈಲಮೈಡ್) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹3 ಲಕ್ಷ ಮೌಲ್ಯದ 100 LSD ಡ್ರಗ್ಸ್ ಸ್ಟ್ರಿಪ್‌ಗಳು ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ನಗರದಿಂದ ಮಾದಕವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ನ.3ರಂದು ಮಧ್ಯಾಹ್ನ ಪಡೀಲ್ ರೈಲ್ವೆ ಸೇತುವೆ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಈ ವೇಳೆ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30) ಮತ್ತು ಸಿದ್ದಾರ್ಥ ಶೆಟ್ಟಿ (35) ಎಂಬವರನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹3.35 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ನಿಹಾಲ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಮಾರಾಟದ ಪ್ರಕರಣ ದಾಖಲಾಗಿದ್ದು, ಸಿದ್ದಾರ್ಥ ಶೆಟ್ಟಿ ವಿರುದ್ಧ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ಗಲಾಟೆ, ಕೊಲೆಯತ್ನ ಹಾಗೂ ಗಾಂಜಾ ಮಾರಾಟ ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಮಾದಕವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

About The Author

Leave a Reply