November 12, 2026
WhatsApp Image 2026-11-12 at 5.52.39 PM

ಬೆಳ್ತಂಗಡಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಸುಮಾರು 15 ಅಡಿ ಆಳದ ಹೊಂಡಕ್ಕೆ ಉರುಳಿಬಿದ್ದ ಪರಿಣಾಮ, ಕಾರಿನಲ್ಲಿದ್ದ ಆರು ಮಂದಿ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ಘಟನೆ ಕಲ್ಮಂಜ ಗ್ರಾಮದ ನಿಡಿಗಲ್ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದೆ.

ಕಾರಿನಲ್ಲಿದ್ದ ಆರು ಮಂದಿಯ ಪೈಕಿ ಐವರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.



ಬೆಳಗಾವಿ ಮೂಲದವರಿಗೆ ಸೇರಿದ ಈ ಕಾರು ಚಾರ್ಮಾಡಿಯಿಂದ ಉಜಿರೆ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿತ್ತು. ನಿಡಿಗಲ್ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆಯ ತೀರಾ ಬಲಭಾಗಕ್ಕೆ ಚಲಿಸಿ ರಸ್ತೆ ಬದಿಯ ಹೊಂಡಕ್ಕೆ ಉರುಳಿಬಿದ್ದಿದೆ. ಕಾರು ತಲೆಕೆಳಗಾಗಿ ಬಿದ್ದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿವೆ.ಅಪಘಾತ ಸಂಭವಿಸಿದ ಸ್ಥಳದಲ್ಲಿ ಪ್ರಸ್ತುತ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಬದಿಯಲ್ಲಿ ಆಳವಾದ ಹೊಂಡವಿದೆ. ಆದರೆ, ಈ ಅಪಾಯಕಾರಿ ಪ್ರದೇಶದಲ್ಲಿ ವಾಹನಗಳು ರಸ್ತೆಯಿಂದ ಜಾರಿ ಹೊಂಡಕ್ಕೆ ಬೀಳದಂತೆ ತಡೆಯಲು ಅಳವಡಿಸಬೇಕಾದ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ.ಸಮರ್ಪಕ ಸುರಕ್ಷತಾ ಕ್ರಮಗಳ ಕೊರತೆಯ ಬಗ್ಗೆ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹ ನಿರ್ಲಕ್ಷ್ಯವೇ ಅಪಘಾತಗಳಿಗೆ ಆಹ್ವಾನ ನೀಡುತ್ತಿದೆ ಎಂದು ದೂರಿದ್ದಾರೆ.ಕಾರು ಹೊಂಡಕ್ಕೆ ಬಿದ್ದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ನೆರವಾದರು. ಆಳವಾದ ಹೊಂಡಕ್ಕೆ ಕಾರು ಉರುಳಿಬಿದ್ದರೂ ಅದೃಷ್ಟವಶಾತ್ ಕಾರಿನಲ್ಲಿದ್ದ ಆರು ಮಂದಿಯೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.




































About The Author

Leave a Reply