

ಕೊಳ್ನಾಡು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ ಹಾಗೂ ಕೊಳ್ನಾಡು ಗ್ರಾಮದ ತಾಳಿತ್ತನೂಜಿ ಅಂಗನವಾಡಿ ಕೇಂದ್ರದ ವತಿಯಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮವು ಇಂದು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕರ್ನಾಟಕ ಸರ್ಕಾರದ ಜೀವವೈವಿಧ್ಯ ಮಂಡಳಿಯ ರಾಜ್ಯ ನಿರ್ದೇಶಕರು ಹಾಗೂ ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು, ಅಂಗನವಾಡಿ ಕೇಂದ್ರಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಗರ್ಭಿಣಿಯರು, ಬಾಣಂತಿಯರು ಮತ್ತು ಶಿಶುಗಳ ಪಾಲಿಗೆ ಎರಡನೇ ತಾಯಿಮನೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವ ಮೂಲಕ ಆರೋಗ್ಯವಂತ ಕುಟುಂಬ ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದರು.
ಅಂಗನವಾಡಿ ಕೇಂದ್ರಕ್ಕೆ ಬಿ.ಎಡ್. ಪದವೀಧರೆಯಾದ ನೂತನ ಕಾರ್ಯಕರ್ತೆ ನೇಮಕಗೊಂಡಿರುವುದು ಸಂತಸದ ವಿಚಾರವಾಗಿದ್ದು, ಇದರಿಂದ ಪುಟಾಣಿ ಮಕ್ಕಳು, ತಾಯಂದಿರು ಹಾಗೂ ಬಾಣಂತಿಯರಿಗೆ ಹೆಚ್ಚಿನ ಪ್ರಯೋಜನವಾಗಲಿದೆ.


ಕಾರ್ಯಕ್ರಮದ ಆಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮಕ್ಕಳ ದಿನಾಚರಣೆಯ ಅಂಗವಾಗಿ ಭಾರತದ ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರು ಅವರನ್ನು ಸ್ಮರಿಸಿದರು. ಮಕ್ಕಳ ಮೇಲಿನ ಅಪಾರ ಪ್ರೀತಿ ಮತ್ತು ಕಾಳಜಿಯಿಂದಾಗಿ ಅವರ ಜನ್ಮದಿನವಾದ ನವೆಂಬರ್ 14ನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಮಕ್ಕಳೇ ದೇಶದ ಭವಿಷ್ಯವಾಗಿದ್ದು, ಅವರ ಶಿಕ್ಷಣ, ಆರೋಗ್ಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಸಮಾಜದ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ನಂತರ ಮಾತನಾಡಿದ ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಅಸ್ಮ ಹಸೈನಾರ್ ಅವರು, ಮಕ್ಕಳ ವೈಯಕ್ತಿಕ ಶುಚಿತ್ವ ಹಾಗೂ ಆರೋಗ್ಯದ ಕಡೆಗೆ ಪೋಷಕರು ವಿಶೇಷ ಗಮನಹರಿಸಬೇಕು. ಸಮತೋಲಿತ ಮತ್ತು ಪೌಷ್ಟಿಕ ಆಹಾರ ನೀಡುವ ಮೂಲಕ ಆರೋಗ್ಯವಂತ ಮಕ್ಕಳನ್ನು ಬೆಳೆಸಲು ಸಾಧ್ಯ. ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.

ಸಾಮಾಜಿಕ ಕಾರ್ಯಕರ್ತ ಹಸೈನಾರ್ ತಾಳಿತ್ತನೂಜಿ ಮಾತನಾಡಿ, ಅಂಗನವಾಡಿ ಕೇಂದ್ರದ ಅಭಿವೃದ್ಧಿಯ ದೃಷ್ಟಿಯಿಂದ ಇಲಾಖೆಯ ಸಹಕಾರದೊಂದಿಗೆ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸುವ ಪ್ರಯತ್ನ ನಡೆಯಬೇಕು. ಉತ್ತಮ ಶಿಕ್ಷಕಿಯ ಮಾರ್ಗದರ್ಶನ ದೊರೆತರೆ ಇನ್ನಷ್ಟು ಮಕ್ಕಳು ಕೇಂದ್ರದತ್ತ ಆಕರ್ಷಿತರಾಗಬಹುದು ಎಂಬ ಆಶಾಭಾವನೆ ವ್ಯಕ್ತಪಡಿಸಿದರು. ಅಂಗನವಾಡಿ ಕೇಂದ್ರದ ಅಗತ್ಯ ಬೇಡಿಕೆಗಳನ್ನು ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಸ್ಮ ಹಸೈನಾರ್ ವಹಿಸಿದ್ದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಆಯೋಜಿಸಲಾಗಿದ್ದ ವಿವಿಧ ಆಟೋಟ ಸ್ಪರ್ಧೆಗಳ ಬಹುಮಾನಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಂಗಾಧರ ಚೌಟ ದೇವಸ್ಯ, ಸಾಮಾಜಿಕ ಮುಖಂಡ ಸೋಮಶೇಖರ ಗೌಡ ತಾಳಿತ್ತನೂಜಿ, ಹನೀಪ್ ತಾಳಿತ್ತನೂಜಿ ಹಾಗೂ ಹಿರಿಯರಾದ ಉಮ್ಮರ್ ಕುಲ್ಯಾರ್,ಆಶಾ ಕಾರ್ಯಕರ್ತೆ ಹೇಮಾವತಿ,ಅಂಗನವಾಡಿ ಸಹಾಯಕಿ ಶ್ರೀಮತಿ ತುಳಸಿ,ಪೋಷಕರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಅಕ್ಷತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕೊನೆಯಲ್ಲಿ ಮಕ್ಕಳಿಗೆ ಸಿಹಿತಿಂಡಿ ವಿತರಿಸಲಾಯಿತು.






