

ಬೆಳ್ತಂಗಡಿ: ಶಾಲಾ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣ ಸಂಸ್ಥೆಗಳಲ್ಲಿ ರಾಜಕೀಯ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿರುವುದನ್ನು ವಿರೋಧಿಸಿ, ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಭಾಷಣ ಮಾಡಿದ ಆರೋಪದ ವಿರುದ್ಧ SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಿಸಿದೆ.
ಕ್ಷೇತ್ರ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ ಅವರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಶಾಲಾ ಕಾರ್ಯಕ್ರಮದ ವೇದಿಕೆಯನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಂಡಿರುವುದು ಹಾಗೂ ಶಾಲಾ ಮಕ್ಕಳ ಮುಂದೆ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸಿರುವುದು ಖಂಡನೀಯ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ದಿನಾಂಕ 14/11/2026ರಂದು ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಶಾಲಾ ಮಕ್ಕಳ ಸಮೂಹದ ಮುಂದೆ ರಾಜಕೀಯ ಪಕ್ಷದ ವಿಚಾರಧಾರೆ ಹಾಗೂ ರಾಜಕೀಯ ಪಕ್ಷದ ಚಟುವಟಿಕೆಗಳನ್ನು ಪ್ರಸ್ತಾಪಿಸಿರುವುದು ಮಕ್ಕಳಲ್ಲಿ ರಾಜಕೀಯ ಪ್ರಭಾವ ಮೂಡಿಸುವ ಪ್ರಯತ್ನವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಶಾಲೆಗಳು ಮಕ್ಕಳಿಗೆ ಶಿಕ್ಷಣ, ಸಂವಿಧಾನದ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಕೇಂದ್ರಗಳಾಗಿದ್ದು, ಅವುಗಳನ್ನು ರಾಜಕೀಯ ಪ್ರಚಾರದ ವೇದಿಕೆಗಳಾಗಿ ಬಳಸುವುದು ಸರಿಯಲ್ಲ. ಮಕ್ಕಳ ಮುಗ್ಧ ಮನಸ್ಸಿನ ಮೇಲೆ ರಾಜಕೀಯ ಪ್ರಭಾವ ಬೀರುವ ಇಂತಹ ನಡೆಗಳು ಶಿಕ್ಷಣದ ಮೂಲ ಉದ್ದೇಶಕ್ಕೆ ವಿರುದ್ಧವಾಗಿವೆ ಎಂದು SDPI ದೂರಿನಲ್ಲಿ ಆಕ್ಷೇಪಿಸಿದೆ.
ಈ ಹಿನ್ನೆಲೆಯಲ್ಲಿ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಶಾಲಾ ಕಾರ್ಯಕ್ರಮಗಳಲ್ಲಿ ರಾಜಕೀಯ ಪ್ರಚಾರ ಹಾಗೂ ಮಕ್ಕಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಪ್ರವೃತ್ತಿಗೆ ಕಡಿವಾಣ ಹಾಕುವಂತೆ SDPI ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಕಣಿಯೂರು ಬ್ಲಾಕ್ ಸಮಿತಿ ಕಾರ್ಯದರ್ಶಿ ಲತೀಫ್ ಪುಂಜಾಲಕಟ್ಟೆ ಹಾಗೂ ಬ್ಲಾಕ್ ಸಮಿತಿ ಸದಸ್ಯರಾದ ರಝಕ್ ಬಳ್ಳಮಂಜ ಉಪಸ್ಥಿತರಿದ್ದರು.






