November 20, 2026
WhatsApp Image 2026-11-20 at 3.52.58 PM

ಮಂಗಳೂರು: ನಗರದ ಹೊರವಲಯದ ದೇರಳಕಟ್ಟೆಯಲ್ಲಿರುವ ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯನ್ನು ಆಕೆಯ ಸಂಬಂಧಿಕರೇ ಕಾಲೇಜು ಆವರಣದಿಂದ ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಹಿಂದೂ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಈ ಘಟನೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಹಲವು ಯುವಕರು ಸೇರಿಕೊಂಡು ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ಕೂರಿಸುವ ದೃಶ್ಯವನ್ನು ಸ್ಥಳದಲ್ಲಿದ್ದವರು ಸೆರೆಹಿಡಿದಿದ್ದಾರೆ. ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ, ವಯಸ್ಕರಾದ ಬಳಿಕ ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಜೀವನ ನಡೆಸುವ ಹಕ್ಕಿದೆ. ಯುವತಿಯೂ ತನ್ನ ನಿರ್ಧಾರವನ್ನು ಸ್ವತಂತ್ರವಾಗಿ ತೆಗೆದುಕೊಳ್ಳಬಹುದು. ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬದವರೇ ಬಲವಂತವಾಗಿ ಕರೆದೊಯ್ದಿದ್ದರೂ ಅದು ಕಾನೂನುಬಾಹಿರವಾಗಿದ್ದು, ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು. ಯುವತಿಯನ್ನು ಪತ್ತೆಹಚ್ಚಿ ಆಕೆಯ ಅಭಿಪ್ರಾಯ ಹಾಗೂ ಇಚ್ಛೆಯನ್ನು ತಿಳಿದುಕೊಳ್ಳಲಾಗುವುದು. ಆಕೆಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

About The Author

Leave a Reply