November 20, 2026
WhatsApp Image 2026-11-20 at 5.41.56 PM

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ಆರೋಪಿ ಸಂತೋಷ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದೇ ಪ್ರಕರಣದ ಎರಡನೇ ಆರೋಪಿ ಸಿದ್ದು ಎಂಬಾತನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

2020ರ ನವೆಂಬರ್ 3ರಂದು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ ಈ ಕೊಲೆ ನಡೆದಿತ್ತು.

ಆರೋಪಿ ಸಂತು ಅಲಿಯಾಸ್ ಸಂತೋಷ್, ಸುರೇಂದ್ರನ್ ಅವರ ಬಳಿ ಕೆಲಸ ಮಾಡಿದ್ದ ಹಣವನ್ನು ಪಡೆಯಲು ತನ್ನ ಸ್ನೇಹಿತ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಮನೆಗೆ ತೆರಳಿದ್ದ. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಬಳಿಕ ವ್ಯಾಯಾಮ ಮಾಡುವ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ತನಿಖೆಯಲ್ಲಿ ತಿಳಿದುಬಂದಿತ್ತು.

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರ ಅಡಿಯಲ್ಲಿ ಐಪಿಸಿ ಕಲಂ 302, 392, 201 ಹಾಗೂ 114 ಜೊತೆಗೆ 34ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಎಸ್‌ಸಿ ನಂಬರ್ 77/2022ರಂತೆ ವಿಚಾರಣೆ ನಡೆದಿದ್ದು, ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್‌ನನ್ನು ದೋಷಿಯೆಂದು ಘೋಷಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ನಿರ್ದೋಷಿಯೆಂದು ಘೋಷಿಸಿ ಖುಲಾಸೆಗೊಳಿಸಿದ್ದಾರೆ.

ಸಂತೋಷ್‌ಗೆ ವಿಧಿಸಿದ ಶಿಕ್ಷೆಯ ವಿವರ:

  • ಐಪಿಸಿ ಕಲಂ 302ರಡಿ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ.
  • ಕಲಂ 392ರಡಿ 2 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ.
  • ಕಲಂ 201ರಡಿ 6 ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2 ಸಾವಿರ ರೂ. ದಂಡ.

ಒಟ್ಟು 32 ಸಾವಿರ ರೂ. ದಂಡ ವಿಧಿಸಲಾಗಿದ್ದು, ಇದರಲ್ಲಿ 7 ಸಾವಿರ ರೂ. ಸರ್ಕಾರಕ್ಕೆ ಹಾಗೂ 25 ಸಾವಿರ ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿ ಶಿಕ್ಷೆಯನ್ನೂ ವಿಧಿಸಲಾಗಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

About The Author

Leave a Reply