November 24, 2026
WhatsApp Image 2026-11-24 at 4.37.10 PM

ಮಂಗಳೂರು: ಹೃದಯಾಘಾತದಿಂದ ಸಂಭವಿಸುವ ಸಾವುಗಳನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೂ ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಹೃದಯಾಘಾತದ ಸಂದರ್ಭದಲ್ಲಿ ರೋಗಿಗಳಿಗೆ ಗೋಲ್ಡನ್ ಅವರ್‌ನಲ್ಲೇ ತುರ್ತು ಚಿಕಿತ್ಸೆ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವ ಉದ್ದೇಶವಿದೆ ಎಂದರು.

ಪ್ರಸ್ತುತ ಎದೆನೋವು ಕಾಣಿಸಿಕೊಂಡರೆ ರೋಗಿಗಳು ತಾಲೂಕು ಆಸ್ಪತ್ರೆಗಳಲ್ಲಿಯೇ ತಕ್ಷಣ ಇಸಿಜಿ ಪರೀಕ್ಷೆ ಮಾಡಿಸಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಇಸಿಜಿ ಪರೀಕ್ಷೆಯಲ್ಲಿ ಹೃದಯಾಘಾತದ ಲಕ್ಷಣಗಳು ಕಂಡುಬಂದಲ್ಲಿ ರೋಗಿಗಳಿಗೆ ಉಚಿತವಾಗಿ ತುರ್ತು ಇಂಜೆಕ್ಷನ್ ನೀಡುವ ವ್ಯವಸ್ಥೆಯೂ ಇದೆ. ಪ್ರಾಥಮಿಕ ತುರ್ತು ಚಿಕಿತ್ಸೆ ಬಳಿಕ ಅಗತ್ಯವಿದ್ದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಆಂಜಿಯೋಗ್ರಾಫಿ ಸೇರಿದಂತೆ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ವಿವರಿಸಿದರು.

ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಜಾರಿಯಲ್ಲಿರುವ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಸಂಬಂಧ ಆರೋಗ್ಯ ಇಲಾಖೆಯ ಅಂಕಿ-ಅಂಶಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದರು.

ಹೃದಯಾಘಾತ ಸಂಭವಿಸಿದಾಗ ಆರಂಭಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ದೊರೆತರೆ ಜೀವ ಉಳಿಸುವ ಸಾಧ್ಯತೆ ಹೆಚ್ಚಿರುವುದರಿಂದ, ತುರ್ತು ಚಿಕಿತ್ಸಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

About The Author

Leave a Reply