

ಪುತ್ತೂರು: ಎಸ್‌ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಎಸ್. ಆಗ್ರಹಿಸಿದರು.
ನವೆಂಬರ್ 24ರಂದು ಕಬಕ ಜಂಕ್ಷನ್‌ನಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಂತರ್ ಮಂತರ್ ಪ್ರತಿಭಟನಾ ಧರಣಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರು ಮತದಾನದ ಹಕ್ಕನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಪ್ರಜಾಪ್ರಭುತ್ವದ ಮೂಲ ಆಶಯವಾದ ಮತದಾನದ ಹಕ್ಕನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಅರ್ಹ ಮತದಾರರಿಗೆ ಯಾವುದೇ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಯಂಗ್ ಡೆಮಾಕ್ರಟ್ಸ್ ಕೇರಳ ರಾಜ್ಯ ಸಮಿತಿ ಸದಸ್ಯರಾದ ಅಹ್ಮದ್ ನಿಸಾರ್ ಮಾತನಾಡಿ, ಸಂಘಪರಿವಾರದ ರಾಜಕೀಯ ನಿಲುವುಗಳು ಹಾಗೂ ಬಿಜೆಪಿ ಸರ್ಕಾರದ ನೀತಿಗಳನ್ನು ಟೀಕಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತು ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿಹೇಳಿದ ಅವರು, ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗಬಾರದು ಎಂದು ಆಗ್ರಹಿಸಿದರು.
SDPI ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಡ್ವೊಕೇಟ್ ಮಜೀದ್ ಖಾನ್ ಮಾತನಾಡಿ, ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಖಾತರಿಯಾಗಬೇಕು. ಎಸ್‌ಐಆರ್ ಪ್ರಕ್ರಿಯೆಯಿಂದ ಮತದಾರರ ಪಟ್ಟಿಯಲ್ಲಿ ಉಂಟಾಗಬಹುದಾದ ಲೋಪಗಳನ್ನು ತಡೆಯುವ ನಿಟ್ಟಿನಲ್ಲಿ ಈ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
WIM ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಮಹಿಳೆಯರು ಸೇರಿದಂತೆ ಸಮಾಜದ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ಸಮಾನವಾಗಿ ದೊರೆಯಬೇಕು. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.

ಮತದಾನ ವಂಚನೆ, ಬೆಲೆ ಏರಿಕೆ ವಿರುದ್ಧ ಹೆನ್ರಿ ಡಿಸೋಜಾ ಆಕ್ರೋಶ:
SDTU ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಹೆನ್ರಿ ಡಿಸೋಜಾ ಮಾತನಾಡಿ, ಮತದಾನದ ಹಕ್ಕು ಕಸಿಯುವ ಹುನ್ನಾರ ನಡೆಯುತ್ತಿದ್ದು, ಹಕ್ಕಿಗಾಗಿ ಹೋರಾಡುವವರನ್ನು ಜೈಲಿಗೆ ಹಾಕುವ ಪ್ರಯತ್ನ ಖಂಡನೀಯ ಎಂದರು. ಮತದಾನ ವಂಚನೆಯ ಆರೋಪ ಹೊತ್ತಿರುವ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಅಧಿಕಾರದಿಂದ ವಜಾಗೊಳಿಸಿ, ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಮಾಜಸೇವಕ ಹರೇಕಳ ಹಾಜಬ್ಬ ಅವರಂತಹವರ ಹೆಸರೇ ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗಿದ್ದು, ಸುಮಾರು 13 ಕೋಟಿಗೂ ಅಧಿಕ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್ ಆಗಿರುವುದು ಆತಂಕಕಾರಿಯಾಗಿದೆ ಎಂದರು. ಇದೇ ವೇಳೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣ ಮತ್ತು ಪ್ರವೇಶ ಶುಲ್ಕ ವಸೂಲಾತಿಯ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SDPI ಪುತ್ತೂರು ಕ್ಷೇತ್ರಾಧ್ಯಕ್ಷರಾದ ಅಶ್ರಫ್ ಬಾವು ವಹಿಸಿದ್ದರು.
ವೇದಿಕೆಯಲ್ಲಿ SDTU ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಮೀದ್ ಸಾಲ್ಮರ, SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಲಕೆಮಜಲು, ಉಪಾಧ್ಯಕ್ಷ ಇನಾಸ್ ರೊಡ್ರಿಗಸ್, ಸದಸ್ಯ ಸಿದ್ದೀಕ್ ಅಲೆಕ್ಕಾಡಿ, ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಸದಸ್ಯರಾದ ಹಮ್ದಾ ಮೆಲ್ಕಾರ್, ಹಮೀದ್ ಪುತ್ತೂರು, SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್., ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಇಸ್ಮಾಯಿಲ್ ಕೆಮ್ಮಾಯಿ ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಸಿರಾಜ್ ಕೂರ್ನಡ್ಕ ಮತ್ತು ತಂಡ ಎಸ್‌ಐಆರ್ ವಿರೋಧಿ ಹಾಡುಗಳನ್ನು ಹಾಡುವ ಮೂಲಕ ಪ್ರತಿಭಟನೆಗೆ ಧ್ವನಿಗೂಡಿಸಿದರು.
ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸ್ವಾಗತಿಸಿದರು. ಪುತ್ತೂರು ನಗರ ಸಮಿತಿ ಅಧ್ಯಕ್ಷ ತಾಜುದ್ದೀನ್ ಸಾಲ್ಮರ ವಂದಿಸಿದರು. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ. ಕಾರ್ಯಕ್ರಮ ನಿರೂಪಿಸಿದರು.






