November 27, 2026
WhatsApp Image 2026-11-27 at 12.40.38 PM

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚ ಎಂಬಲ್ಲಿ 2024ರ ಡಿಸೆಂಬರ್ 11ರಂದು ಪತ್ನಿಯನ್ನು ಕೊಲೆಗೈದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿದ್ದ ಪತಿ ಸಂಜೀವ ನಾಯ್ಕ್‌ಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರಿಗೆ ತಿಳಿಸಿದ್ದ ಸಂಜೀವ ನಾಯ್ಕ್, ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದ. ಆದರೆ, ಪರೀಕ್ಷಿಸಿದ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು. ಈ ವೇಳೆ ಮೃತದೇಹದ ಮೇಲೆ ಗಾಯದ ಗುರುತುಗಳನ್ನು ಗಮನಿಸಿದ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಮರಣ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸ್ ನಿರೀಕ್ಷಕ ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಆರೋಪಿ ಸಂಜೀವ ನಾಯ್ಕ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಪತ್ನಿಯನ್ನು ಕೊಲೆಗೈದಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದ.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105ರ ಭಾಗ 2ರ ಅಡಿಯಲ್ಲಿ ಆರೋಪಿಗೆ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ, ಸೆಕ್ಷನ್ 240ರ ಅಡಿಯಲ್ಲಿ ಆರು ತಿಂಗಳ ಜೈಲು ಶಿಕ್ಷೆಯನ್ನೂ ವಿಧಿಸಿದ್ದಾರೆ.

ಸರ್ಕಾರದ ಪರವಾಗಿ ಅಭಿಯೋಜಕಿ ಜ್ಯೋತಿ ನಾಯ್ಕ್ ವಾದ ಮಂಡಿಸಿದ್ದರು.

About The Author

Leave a Reply