

ಬೆಳ್ತಂಗಡಿ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ 18 ವರ್ಷದ ಐಟಿಐ ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದೇವಸಕೋಡಿಯಲ್ಲಿ ನಡೆದಿದೆ.
ಮೃತರನ್ನು ದೇವಸಕೋಡಿ ನಿವಾಸಿ ಹರ್ಷಿತ್ (18) ಎಂದು ಗುರುತಿಸಲಾಗಿದೆ. ಅವರು ಮಾಲಾಡಿಯಲ್ಲಿರುವ ಐಟಿಐ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾಭ್ಯಾಸ ಮಾಡುತ್ತಿದ್ದರು.
ನವೆಂಬರ್ 26ರಂದು ಬೆಳಿಗ್ಗೆ ಮನೆಯಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಹರ್ಷಿತ್ ಅವರನ್ನು ಕುಟುಂಬಸ್ಥರು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 27ರಂದು ಅವರು ಕೊನೆಯುಸಿರೆಳೆದಿದ್ದಾರೆ.

ಹರ್ಷಿತ್ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.






