ಮಂಗಳೂರು: ನಗರದ ಬಂದರ್ ದಕ್ಕೆಯಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದ್ದಾರೆ. ಚೈಲ್ಡ್ ಹೆಲ್ಪ್ ಲೈನ್‍ಗೆ ಸಾರ್ವಜನಿಕರಿಂದ ಬಂದಿರುವ ದೂರಿನನ್ವಯ ಸೆಪ್ಟೆಂಬರ್ 19ರಂದು ಕಾರ್ಮಿಕ ಇಲಾಖೆ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಪೊಲೀಸ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚೈಲ್ಡ್ ಹೆಲ್ಪ್ ಲೈನ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಹಠಾತ್ ದಾಳಿ ನಡೆಸಿ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಸದ್ಯ ಈ ಮಕ್ಕಳ ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. ತಪ್ಪಿತಸ್ಥ ಮಾಲಕರ ಮೇಲೆ ಪೊಲೀಸ್ ಇಲಾಖೆಯಿಂದ ಪ್ರಕರಣ ದಾಖಲಿಸಲಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿದ ಮಾಲಕರಿಗೆ 50,000 ರೂ. ವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಸಾರ್ವಜನಿಕರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರಿಂದ ದುಡಿಸಿಕೊಳ್ಳುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್‌ಲೈನ್:1098, ಕಾರ್ಮಿಕ ಇಲಾಖೆಯ ದೂರವಾಣಿ ಸಂಖ್ಯೆಗಳಾದ 0824-2435343, 2433132, 2437479 ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ಇದರ ದೂರವಾಣಿ ಸಂಖ್ಯೆ 2433131ಗೆ ಸಂಪರ್ಕಿಸುವಂತೆ ಮಾಡುವಂತೆ ಕಾರ್ಮಿಕರ ಇಲಾಖೆಯ ಪ್ರಕಟಣೆ ತಿಳಿಸಿದೆ.