ವಯನಾಡ್ ಭೂಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮತ್ತು ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಹಣ ವಿತರಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಕೇರಳ ಹೈಕೋರ್ಟ್ ಶುಕ್ರವಾರ ಕಳವಳ ವ್ಯಕ್ತಪಡಿಸಿದೆ.
ಕರ್ನಾಟಕ ಮತ್ತು ತಮಿಳುನಾಡಿನಂತಹ ನೆರೆಯ ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಧನ ಒದಗಿಸಲಾಗಿದೆ ಎಂಬ ವಿಚಾರವನ್ನು ನ್ಯಾಯಮೂರ್ತಿ ಎ ಕೆ ಜಯಶಂಕರನ್ ನಂಬಿಯಾರ್ ಮತ್ತು ನ್ಯಾಯಮೂರ್ತಿ ಶ್ಯಾಮ್ ಕುಮಾರ್ ವಿ ಎಂ ಅವರಿದ್ದ ವಿಭಾಗೀಯ ಪೀಠ ಗಮನಿಸಿತು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ನಿಧಿ ವಿತರಿಸುವುದನ್ನು ಪರಿಗಣಿಸಬೇಕು ಎಂದು ಅದು ಸೂಚಿಸಿತು.
ಭೂಕುಸಿತದಿಂದ ತೀವ್ರ ಹಾನಿ ಮತ್ತು ನಷ್ಟ ಅನುಭವಿಸಿದ್ದರೂ ಕೇರಳಕ್ಕೆ ಇನ್ನೂ ಯಾವುದೇ ಪರಿಹಾರ ಧನ ಒದಗಿಸಿಲ್ಲ ಎಂದು ಅಮಿಕಸ್ ಕ್ಯೂರಿ (ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡುವ ವಕೀಲ) ರಂಜಿತ್ ಥಂಪನ್ ಗಮನ ಸೆಳೆದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ವಿಚಾರ ತಿಳಿಸಿತು.
ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್, ಅಮಿಕಸ್ ನೀಡಿದ ಸಲಹೆಗಳಿಗೆ ಪ್ರತಿಕ್ರಿಯಿಸಲು ಸಮಯಾವಕಾಶ ಕೋರಿದರು. ಹೀಗಾಗಿ ಅಕ್ಟೋಬರ್ 18ರೊಳಗೆ ವಿವರವಾದ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ಮತ್ತು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.
ವಯನಾಡ್ ಭೂಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಪತ್ತು ನಿರ್ವಹಣೆ ಮತ್ತುನಿಯಂತ್ರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿತ್ತು.