
ಬೆಂಗಳೂರು: ಫೆಬ್ರವರಿ 25 ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೇಟಿ ನೀಡಲಿದ್ದು, ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.



ದೆಹಲಿಗೆ ಭೇಟಿ ನೀಡಲಿರುವ ಡಿಕೆ.ಶಿವಕುಮಾರ್ ಅವರು, ಭೇಟಿ ವೇಳೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ನಿರ್ಮಾಣವಾಗಲಿರುವ ಹೊಸ ಕಾಂಗ್ರೆಸ್ ಭವನದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ. ಇದಲ್ಲದೆ, ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗತ್ತಿದೆ.
ಏತನ್ಮಧ್ಯೆ, ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನೂ ಭೇಟಿ ಮಾಡಲಿರುವ ಅವರು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲಿದ್ದಾರೆ.
ಮೇಕೆದಾಟು ಮತ್ತು ಕಳಸಾ ಬಂಡೂರಿ ಯೋಜನೆಗಳಿಗೆ ಅನುಮತಿ ಪಡೆಯುವಲ್ಲಿ ವಿಳಂಬ ಮತ್ತು 2024-25ರ ಬಜೆಟ್ನಲ್ಲಿ ಕೇಂದ್ರವು ಹಂಚಿಕೆ ಮಾಡಿದ್ದ ಭದ್ರಾ ಮೇಲ್ದಂಡ ಯೋಜನೆಗೆ 5,300 ಕೋಟಿ ರೂ. ಬಿಡುಗಡೆಯಲ್ಲಿ ವಿಳಂಬ ಕುರಿತು ಡಿಕೆ.ಶಿವಕುಮಾರ್ ಅವರು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.