ಉಡುಪಿ: ರಾಜ್ಯ ಹಿಂದುಳಿದ ಆರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಮಾರ್ಚ್ 12ರ ಸಂಜೆ 4ಕ್ಕೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೂ ಕೂಡ ಇವರೇ ಆಗುವ ಎಲ್ಲ ಸಾಧ್ಯತೆ ಇದೆ.ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿರುವ ಹೆಗ್ಡೆಯವರೇ ಖಚಿತಪಡಿಸಿದ್ದಾರೆ. ಬ್ರಹ್ಮಾವರ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ ಅವರು ಅನಂತರ ಕಾಂಗ್ರೆಸ್ ಸೇರಿ 2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದು ಸಂಸದರಾಗಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಅನಂತರದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಗೆ ಸೇರಿದ್ದರು. ಬಿಜೆಪಿ ಸರಕಾರ ಇದ್ದಾಗ ಅವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿತ್ತು. ರಾಜ್ಯದಲ್ಲಿ ಬಹು ಚರ್ಚಿತ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚೆಗಷ್ಟೇ ಸರಕಾರಕ್ಕೆ ಸಲ್ಲಿಸಿದ್ದರು.