ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯ ಚಾರ್ಜ್ (ಆಪಾದನೆ ವಾಚಿಸುವ) ಪ್ರಕ್ರಿಯೆ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಇಂದು ನಡೆಯಿತು. ಇದಕ್ಕೂ ಮುನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತಂದರು. ಮಾರ್ಚ್ 7ರಂದು ನ್ಯಾಯಾಧೀಶ ದಿನೇಶ್ ಹೆಗ್ಡೆ, ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಆಪಾದನೆ ವಾಚಿಸಲು ಬೇಕಾದ ಸಾಕ್ಷ್ಯಾಧಾರಗಳಿವೆ ಎಂದು ತೀರ್ಮಾನಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಆದೇಶಿಸಿದ್ದರು.ಅದರಂತೆ ಆರೋಪಿಯನ್ನು ಕೋರ್ಟ್‌ಗೆ ಇಂದು ಬೆಂಗಳೂರು ಮತ್ತು ಮಲ್ಪೆ ಪೊಲೀಸರು ಬಿಗಿ ಭದ್ರತೆಯಲ್ಲಿ ಕರೆತಂದರು. ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿಗೆ ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ,ಇಂದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸರಕಾರಿ ಅಭಿಯೋಜಕರಿಗೆ ಅವಕಾಶ ಕಲ್ಪಿಸಿ ನ್ಯಾಯಾಲಯವು ಆದೇಶಿಸಿದೆ.