Visitors have accessed this post 756 times.

ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ

Visitors have accessed this post 756 times.

 ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಎಂಬ ಕಾಲೇಜು ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಆದರೆ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಲವ್ ಜಿಹಾದ್ ಕುರಿತು ಎಲ್ಲಿಯೂ ಉಲ್ಲೇಖವಾಗಿಲ್ಲ.

 

ಹೌದು ನೇಹಾ ಹಿರೇಮಠ ಹತ್ಯೆಗೆ ಆರೋಪಿಯ ಹತಾಶೆಯೇ ಕಾರಣ ಎಂದು ಸಿಐಟಿ ಪೊಲೀಸರು ಕೋರ್ಟ್​ಗೆ ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ. ಇದೇ ವೇಳೆ, ಲವ್ ಜಿಹಾದ್​ ಕುರಿತ ಯಾವುದೇ ವಿಚಾರಗಳನ್ನು ನಮೂದಿಸಿಲ್ಲ. ಒಟ್ಟು 483 ಪುಟಗಳ ಚಾರ್ಜ್​ಶೀಟ್ ಸಲ್ಲಿಸಲಾಗಿದೆ.ಆರೋಪಿ ಫಯಾಜ್ ವಿರುದ್ಧ ಐಪಿಸಿ ಕಲಂ 302 (ಮರಣದಂಡನೆ ಇಲ್ಲವೇ ಜೀವಾವಧಿ ಶಿಕ್ಷೆ), 341(ಒಂದು ತಿಂಗಳ ಜೈಲು ಶಿಕ್ಷೆ) ಹಾಗೂ 506 (ಜೀವ ಬೆದರಿಕೆಗಾಗಿ 7 ವರ್ಷಗಳ ಜೈಲು ಶಿಕ್ಷೆ) ಅಡಿಯಲ್ಲಿ ದೋಷಾರೋಪ ಹೊರಿಸಲಾಗಿದೆ.

ನೇಹಾಳ ತಂದೆ, ತಾಯಿ, ಸಹೋದರ, ಸಹಪಾಠಿಗಳು, ಗೆಳತಿಯರು, ಬಿವಿಬಿ ಕಾಲೇಜಿನ ಉಪನ್ಯಾಸಕರು ಸೇರಿದಂತೆ ಒಟ್ಟು 99 ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಪ್ರತ್ಯಕ್ಷ ಸಾಕ್ಷಿಗಳು, ಸಿಸಿಟಿವಿ ದೃಶ್ಯಾವಳಿಗಳು, ದಾಖಲೆಗಳು, ಮರಣೋತ್ತರ ಶವ ಪರೀಕ್ಷೆ ಕೈಗೊಂಡ ವೈದ್ಯರು ಹಾಗೂ ತಜ್ಞರ (ಫೊರೆನ್ಸಿಕ್) ವರದಿಗಳೂ ಅಡಕವಾಗಿವೆ.

ಫಯಾಜ್​ ಮತ್ತು ನೇಹಾ 2020-21ರಲ್ಲಿ ಹುಬ್ಬಳ್ಳಿಯ ಪಿ.ಸಿ.ಜಾಬಿನ್ ಕಾಲೇಜಿನಲ್ಲಿ ಬಿಸಿಎ ಅಧ್ಯಯನ ಮಾಡುತ್ತಿದ್ದಾಗ ಸಹಪಾಠಿಗಳಾಗಿದ್ದರು. ಇಬ್ಬರೂ ಆರಂಭದಲ್ಲಿ ಸ್ನೇಹಿತರಾಗಿದ್ದರು. 2022ರಲ್ಲಿ ಕ್ರಮೇಣ ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. 2024ರ ಮಾರ್ಚ್ ತಿಂಗಳಿನಲ್ಲಿ ಇಬ್ಬರಿಗೂ ಮನಸ್ತಾಪ ಉಂಟಾಗಿತ್ತು. ಇದರಿಂದ ಬೇಸತ್ತ ನೇಹಾ, ಫಯಾಜ್ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದಳು.

ಫಯಾಜ್‌ನನ್ನು ನೇಹಾ ನಿರ್ಲಕ್ಷ್ಯ ಮಾಡಲು ಆರಂಭಿಸಿದ್ದರಿಂದ ಆತ ಹತಾಶೆಗೊಂಡು ಕೊಲೆ ಮಾಡಲು ನಿರ್ಧರಿಸಿದ್ದಾನೆ. 2024ರ ಏಪ್ರಿಲ್ 18ರಂದು ಸಂಜೆ 4.40ರ ವೇಳೆಗೆ ಚಾಕುವಿನಿಂದ ಮನಬಂದಂತೆ ಚುಚ್ಚಿ ಕೊಲೆ ಮಾಡಿದ್ದಾನೆ. ಕೊಲೆಗೂ ಮುನ್ನ ನೇಹಾಳ ಎದುರು ಫಯಾಜ್, “ಇಷ್ಟು ದಿನ ಪ್ರೀತಿಸಿ ಈಗ ಮೋಸ ಮಾಡುತ್ತಿದ್ದೀಯಾ? ನನ್ನನ್ನು ಮದುವೆ ಆಗುವುದಿಲ್ಲವೇ? ಈಗ ನಿನ್ನನ್ನು ಬಿಡುವುದಿಲ್ಲ” ಎಂದು ಕೂಗುತ್ತಾ ಆಕೆಗೆ ಚಾಕುವಿನಿಂದ ಚುಚ್ಚಿ, ಚಾಕು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದಾನೆ ಎಂದು ಸಿಐಡಿ ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ.

Leave a Reply

Your email address will not be published. Required fields are marked *